ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲು ಆರಂಭಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ.
ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರ ಪ್ರಾರಂಭವಾಯಿತು. ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.