ಅಹಮದಾಬಾದ್ : ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ – ಆಸ್ಟ್ರೇಲಿಯಾ 6ನೇ ವಿಶ್ವಕಪ್ ಫೈನಲ್ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ರೋಚಕ ಗೆಲುವು ಸಾಧಿಸಿದೆ.
ಆಸ್ಟ್ರೇಲಿಯಾ ಗೆಲುವು ಸಾಧಿಸಿದ ಬೆನ್ನಲ್ಲೆ ಆಸ್ಟ್ರೇಲಿಯಾ ತಂಡದ ಆಟಗಾರ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಅವಮಾನ ಮಾಡಿದ್ದಾರೆಂದು ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಫೈನಲ್ ಪಂದ್ಯಕ್ಕೂ ಮುನ್ನ ಮಾರ್ಷ್ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್ಗೆ 450 ರನ್ ಬಾರಿಸುತ್ತದೆ, ಭಾರತ 65 ರನ್ಗೆ ಆಲೌಟ್ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್ ಬಾರಿಸಿ 15ರನ್ಗೆ ಔಟಾಗಿದ್ದರು. ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 240 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್ 137 ರನ್ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.