ಬೆಂಗಳೂರು : ದೀಪಾವಳಿ ಸಂಭ್ರಮಾಚರಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಾದ್ಯಂತ ಪಟಾಕಿ ಸಿಡಿಸಲು ನಿಯಮಗಳನ್ನು ರೂಪಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ನಗರದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಹಾಗೂ ಬಳಕೆಗೆ ಮಾತ್ರ ಅವಕಾಶವಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ನಿಗಾ ವಹಿಸಲು ಎಸಿಪಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಬೆಂಗಳೂರು ನಗರದಲ್ಲಿ 62 ಮೈದಾನಗಳಲ್ಲಿ ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಮಾರಲು ಅನುಮತಿ ಕೋರಿ 912 ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ, 263 ವ್ಯಾಪಾರಿಗಳಿಗೆ ಪರವಾನಗಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.