ಕಬ್ಬಿನ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡುವಂತೆ ಅಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹುಕ್ಕೇರಿ ( HUKKERI ) ತಾಲೂಕಿನ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಾಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.
ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ದರ ನಿಗದಿ ಮಾಡುವಂತೆ ಒತ್ತಾಯಿಸಿ ಸುವರ್ಣಸೌಧ ( SUVARNA SOUDHA ) ಕ್ಕೆ ಮುತ್ತಿಗೆ ಹಾಕಲು ಹೊರಟ ರೈತರನ್ನು ಹತ್ತರಗಿ ಟೋಲ್ ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಅರೆಬೆತ್ತಲೆಯಾಗಿ ರೈತರು ಪ್ರತಿಭಟನೆ ನಡೆಸಿದ್ದಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ : – ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಈ ವೇಳೆ ಧರಣಿ ಕುಳಿತ ಮೂವತ್ತಕ್ಕೂ ಅಧಿಕ ರೈತರನ್ನ ಪೊಲೀಸರು ವಶಕ್ಕೆ ಪಡೆದರು. ಅದರಂತೆ ರೈತರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟವೂ ನಡೆದಿದ್ದು, ಪೊಲೀಸರನ್ನು ಬಳಸಿ ಪ್ರತಿಭಟನೆ ಹತ್ತಿಕ್ಕುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ರೈತರ ಪ್ರತಿಭಟನೆ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರತಿಭಟನಾ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿತ್ತು.
ಇದನ್ನೂ ಓದಿ : – ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ಶಿವಣ್ಣ ಇನ್ನಿಲ್ಲ